ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಪಾಸ್ (1-9-classes students pass without exams) ಮಾಡುವ ಆದೇಶವನ್ನು ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರ ಹಿನ್ನೆಲೆ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮತ್ತು ಫಲಿತಾಂಶ ಪ್ರಕಟಣೆ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ತರಗತಿವಾರು ನಿರ್ಧಾರ ಕೈಗೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕೋವಿಡ್ ಸೋಂಕು ದಿನೇ ದಿನೇ ಹೆಚ್ಚುತ್ತಲೇ ಇದೆ. ಪ್ರತಿನಿತ್ಯ ಕೋವಿಡ್ ಸಾವಿನ ಸಂಖ್ಯೆ ಕೂಡ ಏರುತ್ತಲೇ ಇದೆ. ಈಗಾಗಲೇ ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಕೋನದಿಂದ ಹತ್ತು ಹಲವು ಕ್ರಮಗಳನ್ನು ಅನುಸರಿಸಲಾಗಿದ್ದು, ಇದೀಗ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಒಂದರಿಂದ ಐದನೇ ತರಗತಿ ಮತ್ತು ಆರರಿಂದ ಒಂಭತ್ತನೇ ತರಗತಿಗಳವರೆಗೆ ಮೌಲ್ಯಾಂಕನ ಕುರಿತು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
1 ರಿಂದ 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ವಿದ್ಯಾಗಮ ಕಾರ್ಯಕ್ರಮದಲ್ಲಿ ನಿರ್ವಹಿಸಿದ ದಾಖಲೆಗಳು, ಸಂವಹನದ ಆಧಾರದ ಮೇಲೆ ಕೆಲವು ಶಾಲೆಯವರು ಆನ್‌ಲೈನ್ ಮೂಲಕ ತರಗತಿ ನಿರ್ವಹಿಸಿದ್ದಲ್ಲಿ ಆ ಸಂದರ್ಭದಲ್ಲಿ ಅವಲೋಕಿಸಿದ ವಿದ್ಯಾರ್ಥಿಗಳ ಕಲಿಕಾ ಪ್ರಗತಿ, ಮಕ್ಕಳಿಗೆ ನೀಡಿದ್ದ ಪ್ರಬಂಧ, ಗೃಹ ಕೆಲಸ ಇತರೆ ಚಟುವಟಿಕೆಗಳನ್ನಾಧರಿಸಿದ ಕೃತಿ ಸಂಪುಟ, ಚೈಲ್ಡ್ ಪ್ರೊಫೈಲ್, ಇತರೆ ಲಭ್ಯ ದಾಖಲೆಗಳನ್ನು ಅವಲೋಕಿಸಿ ಈವರೆವಿಗೆ ಪೂರೈಸಿದ ಪಠ್ಯವಸ್ತು, ಸಾಮರ್ಥ್ಯ ಕಲಿಕಾ-ಫಲಗಳ ಸಾಧನೆ ಮತ್ತು ಕೊರತೆಗಳನ್ನು ಶಾಲಾ ಹಂತದಲ್ಲಿ ಸಿಸಿಇ ನಿಯಮಗಳಂತೆ ವಿಶ್ಲೇಷಿಸಿ ಪ್ರಗತಿ ಪತ್ರದಲ್ಲಿ ದಾಖಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮುಂದಿನ ತರಗತಿಗೆ ಬಡ್ತಿ ನೀಡುವುದು ಮತ್ತು ಅದನ್ನು ಪ್ರಗತಿ ಪತ್ರದಲ್ಲಿ ದಾಖಲಿಸುವುದು ಸೇರಿದಂತೆ ಈ ಎಲ್ಲ ಪ್ರಕ್ರಿಯೆಗಳನ್ನು ಏಪ್ರಿಲ್ 30 ರೊಳಗೆ ನಿರ್ವಹಿಸಿ ಫಲಿತಾಂಶ ದಾಖಲಿಸಿ ಪೂರ್ಣಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.