ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಭಾನುವಾರ ಹಲವೆಡೆ ವ್ಯಾಪಕ (Heavy rain) ಮಳೆಯಾಗಿದೆ. ರಾಜ್ಯದ ಹಲವೆಡೆ ಸುರಿಯುತ್ತಿರುವ ಮುಂಗಾರು ಮಳೆ ಭಾನುವಾರ ಕೊಂಚ ಕಡಿಮೆಯಾಗಿದೆ. ಜೂನ್ 23ರಿಂದ ತಗ್ಗುವ ಸಾಧ್ಯತೆಯಿದೆ. ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ಪ್ರಭಾವದಿಂದ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವರೆಡೆ ಜೂನ್ 21 ಮತ್ತು 22 ರಂದು ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸದ್ಯ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆಯಿದೆ. ಇನ್ನೆರಡು ದಿನಗಳ ನಂತರ ಮಳೆಯ ಪ್ರಮಾಣ ಕ್ಷೀಣಿಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಮತ್ತು ಉತ್ತರ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿರುವುದರಿಂದ ಜೂನ್ 21 ಮತ್ತು 22 ರಂದು ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ. ಉಳಿದಂತೆ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೂನ್ 21 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ತೀರ ಪ್ರದೇಶಗಳಲ್ಲಿ ಪ್ರತಿ ಗಂಟೆಗೆ ಗಾಳಿಯ ವೇಗವು 40 ರಿಂದ 50 ಕಿ.ಮೀ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉತ್ತರ ಕರ್ನಾಟಕದಲ್ಲಿ ತಗ್ಗಿತು ಮಳೆ

ಮಹಾರಾಷ್ಟ್ರದಲ್ಲಿ ಮಳೆ ಪ್ರಮಾಣ ಕಡೆ ಹಾಗೂ ಉತ್ತರ ಕರ್ನಾಟಕದಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಸತತ ಮಳೆಯಿಂದ ತತ್ತರಿಸಿದ ಉತ್ತರ ಕರ್ನಾಟಕದ ಜನ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಟ್ಟಂತಾಗಿದೆ. ಮಳೆಯ ಅಬ್ಬರ ತಗ್ಗಿದ್ದರಿಂದ ಪ್ರಮುಖ ನದಿಗಳ ಅಬ್ಬರವೂ ಕಡಿಮೆಯಾದರೂ ಇನ್ನೂ ಕೆಲವು ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ನದಿ ತೀರದ 16 ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಜಲಾಶಯಕ್ಕೆ 1.40 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಕೃಷ್ಣಾ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್ ತುಂಬಿ ಹರಿಯುತ್ತಿದೆ. ಮುಧೋಳ ತಾಲೂಕಿನ ಹಲವು ಸೇತುವೆ, ರಸ್ತೆ ಜಲಾವೃತವಾಗಿವೆ. ಮಲೆನಾಡಿನಲ್ಲಿ ವರುಣ ಬಿಡುವು ನೀಡಿದ್ದರಿಂದ ಜನಜೀವನ ಯಥಾಸ್ಥಿತಿಗೆ ಮರಳುತ್ತಿದೆ.

Leave a Reply

Your email address will not be published. Required fields are marked *