ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ . ಇನ್ನೆರಡು ದಿನ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿರುವುದರಿಂದ 11 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ತುಮಕೂರ, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಧಾರವಾಡ, ಚಾಮರಾಜನಗರ, ಬೆಳಗಾವಿ, ಉಡುಪಿ, ದಕ್ಷಿಣಕನ್ನಡ, ಗದಗ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕಾಡುತ್ತಿರುವ ಮಳೆ-ಬೆಳೆಗೆ ಕುತ್ತು
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಿಂದಾಗಿ ಬೆಳೆ ಹಾನಿಯಾಗುತ್ತಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದರಿಂದ ರೈತರಲ್ಲಿ ಆತಂಕ ಸೃಷ್ಟಿಯಾಗಿದೆ.
ನೆರೆ ರಾಜ್ಯಗಳಾದ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರೈತರ ಅಪಾರ ಬೆಳೆ ನಷ್ಟವಾಗುತ್ತಿದೆ. ತರಕಾರಿ, ಹಣ್ಣುಗಳ ಬೆಲೆ ಏರತೊಡಗಿದೆ. ಕರಾವಳಿ ಮತ್ತು ಮಲೆನಾಡುಗಳಲ್ಲಿ ಅಡಿಕೆ ಹಾಗೂ ಭತ್ತದ ಬೆಳೆ ಕೈಗಹೆ ಬರುತ್ತಿರುವ ವೇಳೆಯೇ ಮಳೆಯಾಗುತ್ತಿದ್ದರಿಂದ ರೈತರಿಗೆ ನಷ್ಟವಾಗುವ ಸಾಧ್ಯತೆಯಿದೆ.
ಮಳೆ ಇದೇ ರೀತಿ ಮುಂದುವರೆದರೆ ರೈತರಿಗೆ ಕೈಗೆ ಬಂದ ತತ್ತು ಬಾಯಿಗೆ ಬರಲಿಲ್ಲವೆಂಬಂತಾಗುತ್ತದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೊಗರಿ ಹೂವಾಡುವ ಹಂತದಲ್ಲಿದೆ. ಈ ಸಂದರ್ಭದಲ್ಲಿ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಾದರೆ ಹೂ ಉದುರುವ ಸಾಧ್ಯತೆಯಿರುತ್ತದೆ. ಭತ್ತದ ರಾಶಿ ಮಾಡಿದ ರೈತರು ಬಿಸಿಲಿಲ್ಲದೆ ಮನೆಯಲ್ಲಿಯೇ ಸಂಗ್ರಹಿಸಿಟ್ಟುಕೊಂಡಿದ್ದಾರೆ. ಇದೇ ರೀತಿ ವಾತಾವರಣವಿದ್ದರೆ ರಾಶಿ ಮಾಡಿ ಮನೆಯಲ್ಲಿ ಸಂಗ್ರಹಿಸಿಟ್ಟ ರೈತರಿಗೂ ಹಾನಿಯಾಗುವ ಸಾಧ್ಯತೆ ಹೆಚ್ಚಿದೆ.
ಭಾರಿ ಮಳೆ ಸಾಧ್ಯತೆ ರಜೆ ಘೋಷಣೆ
ರಾಜ್ಯದಲ್ಲಿ ಅಕಾಲಿಕ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಶುಕ್ರವಾರ ಮತ್ತು ಶನಿವಾರ ರಜೆ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ. ಪರಿಸ್ಥಿತಿ ನೋಡಿ ರಜೆ ನೀಡುವ ಕುರಿತು ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿಯೂ ಮಳೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ 40 ರಿಂದ 60 ಕಿ.ಮೀ ವೇಗದಲ್ಲಿ ಗಾಳಇ ಬೀಸುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.